ಸುಳ್ಯ: ನಗರ ಚಪಂಚಾಯತ್ ಚುನಾವಣೆಯಲ್ಲಿ 3ನೇ ವಾರ್ಡ್ (ಜಯನಗರ)ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿರುವ ನವೀನ್ ಮಚಾದೋ ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ನವೀನ್ ಪಕ್ಷದಿಂದ ಸೀಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
ಶುಕ್ರವಾರ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ವಿಷಯ ತಿಳಿಸಿದ ನವೀನ್ ಮಚಾದೋ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದು ಕಾಂಗ್ರೆಸ್ ಪಕ್ಷದಲ್ಲಿಯೇ ಮುಂದುವರಿದು ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ಕಳೆದ 15 ವರುಷದಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದು ನ.ಪಂ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಸೀಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೆ. ಇದೀಗ ಬದಲಾದ ರಾಜಕೀಯ ಸನ್ನಿವೇಶದ ಹಿನ್ನಲೆಯಲ್ಲಿ ಸ್ವಯಂ ಹಿಂಪಡೆಯುತ್ತಿದ್ದೇನೆ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿಯ ಹಲವು ಮಂದಿ ಬೆಂಬಲ ಘೋಷಿಸಿದ್ದರು. ಆದರೆ ಈಗ ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಂದ ಬಳಿಕ ಬೆಂಬಲಕ್ಕೆ ನಿಂತವರು ಹಿಂದೆ ಸರಿಯುತ್ತಿದ್ದಾರೆ. ಆ ಹಿನ್ನಲೆಯಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿರುವುದಾಗಿ ಅವರು ತಿಳಿಸಿದ್ದಾರೆ.