ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಇನ್ನಷ್ಟು ಬಲಪಡಿಸುವ ಹಾಗೂ ಮತ್ತೆ ಅಧಿಕಾರಕ್ಕೆ ತರುವ ಸರ್ವರೀತಿಯ ಪ್ರಯತ್ನ ಮಾಡಲಾಗುತ್ತದೆ. ಈ ಹಂತದಲ್ಲಿ ಪಕ್ಷದ ಎಲ್ಲಾ ನಾಯಕರನ್ನೂ ಒಂದುಗೂಡಿಸಿ ಸಂಘಟಿತವಾಗಿ ಯಾವುದೇ ಸಮಸ್ಯೆ ಎದುರಿಸಲಾಗುವುದು. ಕಾರ್ಯಕರ್ತರ ನಿರೀಕ್ಷೆಗೆ ತಕ್ಕ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ನೂತನ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲು ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುವುದು. ಪಕ್ಷದ ಒಳಗಿನ ಎಲ್ಲಾ ಗೊಂದಲಗಳು ನಿವಾರಣೆಯಾಗಿ ಒಂದಾಗಿ ಪಕ್ಷ ಸಂಘಟನೆ ಮಾಡಲಾಗುತ್ತದೆ ಎಂದ ಅವರು ಪ್ರತೀ ಜಿಲ್ಲೆಗೂ ಪ್ರವಾಸ ಮಾಡಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವೆ ಎಂದು ಹೇಳಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ನಾವಧಿ ಪ್ರಚಾರಕರಾಗಿ 12 ವರ್ಷಗಳ ಕಾಲ ಸಂಘಟನೆಗಾಗಿ ದುಡಿದು ಬಳಿಕ ದಕ ಬಿಜೆಪಿಯ ಜಿಲ್ಲಾ ಕಾರ್ಯದರ್ಶಿಯಾಗಿ ಕೆಲಸ ಮಾಡಿ ಸಂಸದರಾದ ನಳಿನ್‌ಕುಮಾರ್ ಕಟೀಲ್ ಈಗ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ನೂತನ ಅಧ್ಯಕ್ಷ ನಳಿನ್ ಕುಮಾರ್ ಅವರಿಗೆ ಮಾಜಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ರಾಜ್ಯದ ಬಹುತೇಕ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಪ್ರಮುಖರಾದ ಡಿ ವಿ ಸದಾನಂದ ಗೌಡ , ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಅಶ್ವತ್ಥ ನಾರಾಯಣ , ಲಕ್ಷ್ಮಣ ಸವದಿ , ಸಿ ಟಿ ರವಿ, ಗೋವಿಂದ ಕಾರಜೋಳ, ರಾಜ್ಯ ಉಸ್ತುವಾರಿ ಮುರಳೀಧರ ರಾವ್, ಕೇಂದ್ರ ಸಚಿವ ಸುರೇಶ್ ಅಂಗಡಿ ,ಕೆ ಎಸ್ ಈಶ್ವರಪ್ಪ, ಸುರೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಬಿಜೆಪಿ ಕಚೇರಿ ಎದುರಿನ ರಸ್ತೆಯಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಒಂದು ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿತ್ತು.
ಕಾರ್ಯಕ್ರಮಕ್ಕೂ ಮುನ್ನ ಕಾಡು ಮಲ್ಲೇಶ್ವರ ದೇವಸ್ಥಾನಕ್ಕೆ ತೆರಳಿ ನಳಿನ್ ಕುಮಾರ್ ಕಟೀಲು ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆಯಲ್ಲಿದ್ದರು.
ಕಾರ್ಯಕ್ರಮದ ಬಳಿಕ ನಳಿನ್ ಕುಮಾರ್ ಕಟೀಲು ಅವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಪರ್ಕಕ್ಕೆ ಕರೆತಂದ ಸದ್ಯ ಭಾರತೀಯ ಕಿಸಾನ್ ಸಂಘದ ರಾಷ್ಟ್ರೀಯ ಮುಖಂಡರೂ ಆದ ಸವಣೂರಿನ ಬಿ.ಕೆ.ರಮೇಶ್ ಅವರನ್ನು ಭೇಟಿಯಾದರು. ರಮೇಶ್ ಅವರನ್ನು ನಳಿನ್ ಕುಮಾರ್ ಕಟೀಲು ಅವರು ಗುರುಗಳು ಎಂದೇ ಸಂಬೋಧಿಸಿ ಮಾತನಾಡುತ್ತಾರೆ.
