ಬೆಂಗಳೂರು : ರಾಜ್ಯ ಸರಕಾರವು ಕೊವಿಡ್ ನಿಯಮಾವಳಿಯಂತೆ ಸಾರ್ವಜನಿಕವಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವುದಕ್ಕೆ ನಿರ್ಬಂಧ ವಿಧಿಸಿತ್ತು. ಈಗ ಇಂತಹ ನಿರ್ಬಂಧವನ್ನು ತೆರವು ಗೊಳಿಸಿರುವ ರಾಜ್ಯ ಸರಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದರ ಜೊತೆಗೆ ಒಂದಷ್ಟು ನಿಯಮಾವಳಿಗಳನ್ನು ಸೇರ್ಪಡೆಗೊಳಿಸಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಸಸ್ಥಾಪನೆಗೆ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಗಣೇಶೋತ್ಸವ ಆಚರಿಸುವ ಸಂಬಂಧ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಕೊರೊನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ಹೊಸ ಮಾರ್ಗಸೂಚಿಯನ್ನು ರೂಪಿಸಿದೆ. ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಹೆಚ್ಚು ಜನರು ಸೇರದಂತೆ ಗಲ್ಲಿ ಗಲ್ಲಿ ಗಳಲ್ಲಿ ಆಚರಿಸಲು ಅವಕಾಶ ನೀಡದೇ, ವಾರ್ಡ್ ಗೆ ಒಂದರಂತೆ, ಏರಿಯಾಗೆ ಒಂದರಂತೆ, ಗ್ರಾಮಗಳಲ್ಲಿ ಒಂದರಂತೆ ಸ್ಥಾಪಿಸಿ, ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಅವಕಾಶ ನೀಡಿದೆ.
ಗಣೇಶೋತ್ಸವ ಆಚರಣೆಯ ಪರಿಷ್ಕೃತ ಮಾರ್ಗಸೂಚಿಗಳು ಈ ಕೆಳಗಿನಂತಿವೆ
- ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು.
- ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪನೆ ಮಾಡಬೇಕು.
- ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು, ಮಂಡಳಿಗಳು, ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೊರೇಷನ್, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು. ಒಂದು ವಾರ್ಡಿಗೆ, ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸಬೇಕು.
- ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸವೇಕು.
- ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಸೇರಿ ಯಾವುದೇ ಮನರಂಜನಾ ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ.
- ಗಣೇಶ ಮೂರ್ತಿ ತರುವಾಗ ಅಥವಾ ವಿಸರ್ಜಿಸುವಾಗ ಯಾವುದೇ ಮೆರವಣಿಗೆ ಮಾಡುವಂತಿಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
- ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸಿದ ನಂತರ ಪಾಲಿಕೆ, ಸ್ಥಳೀಯ ಸಂಸ್ಥೆಗಳು, ನಿರ್ಮಿಸಿರುವ ಹೊಂಡ ಅಥವಾ ಮೊಬೈಲ್ ಟ್ಯಾಂಕ್ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜಿಸುವುದು
- ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪನೆಯ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾದ ಆವರಣ ನಿರ್ಮಿಸಬೇಕು. ಒಂದೇ ಬಾರಿಗೆ 20ಕ್ಕಿಂತ ಹೆಚ್ಚು ಭಕ್ತರು ಅಲ್ಲಿ ಸೇರದಂತೆ ಗಮನವಹಿಸಬೇಕು.