ಸುಳ್ಯ: ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ಕಾಲೇಜಿನ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ನೆಹರೂ ಸ್ಮಾರಕ ಕಾಲೇಜಿನಲ್ಲಿ ಗುರುವಾರ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಪಂದ್ಯಾಟವನ್ನು ಉದ್ಘಾಟಿಸಿದರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತಮ್ಮ ಕ್ರೀಡಾ ಸಾಮರ್ಥ್ಯದ ಮೂಲಕ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಮುಖ್ಯ ಅತಿಥಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮಾತನಾಡಿ ಶಾಲಾ ಕಾಲೇಜಿನ ಕ್ರೀಡಾಕೂಟಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ತೋರ್ಪಡಿಸಲು ಇರುವ ವೇದಿಕೆ. ಕ್ರೀಡಾ ಸ್ಫೂರ್ತಿಯೊಂದಿಗೆ ಆಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕು ಎಂದು ಕರೆ ನೀಡಿದರು.
ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ.ಬಾಲಚಂದ್ರ ಗೌಡ ಅಧ್ಯಕ್ಷತೆ ವಹಿಸಿದ್ದರು. ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಕ್ರೀಡಾ ಸಂಯೋಜಕ ಪ್ರೆಮನಾಥ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ್ ವಂದಿಸಿದರು. ಪಿ.ಬಿ.ಬೇಬಿವಿದ್ಯಾ ಮತ್ತು ಹರೀಶ್ ಕಾರ್ಯಕ್ರಮ ನಿರೂಪಿಸಿದರು.
ಪದವಿಪೂರ್ವ ವಿಭಾಗದ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ತಲಾ ಆರು ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದವು.