ಸುಳ್ಯ: ನಮ್ಮ ಹಿರಿಯರ ಹೋರಾಟದ ಮತ್ತು ತ್ಯಾಗದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ. ಅವರ ತ್ಯಾಗದ ಫಲವಾಗಿ ನಾವು ಇಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಆ ಸ್ವಾತಂತ್ರ್ಯದ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಶಾಸಕ ಎಸ್. ಅಂಗಾರ ಹೇಳಿದ್ದಾರೆ.
ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ಆಶ್ರಯದಲ್ಲಿ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ 73ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಉಳಿಸಲು ದೇಶ ಭಕ್ತಿ, ಅರ್ಪಣಾ ಮನೋಭಾವ ಅತೀ ಅಗತ್ಯ ಎಂದು ಅವರು ಹೇಳಿದರು.
ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ವಾಣೀಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ್ ಗೌಡ ಬಿ.ಕೆ, ಗೃಹ ರಕ್ಷಕ ದಳದ ಕಮಾಂಡೆಂಟ್ ಜಯಂತ್ ಶೆಟ್ಟಿ ಉಪಸ್ಥಿತರಿದ್ದರು.
ನಿವೃತ್ತ ಸೈನಿಕ ಚೆನ್ನಪ್ಪ ಗೌಡ ಅತ್ಯಾಡಿ, ರಕ್ತದಾನಿ ಪಿ.ಬಿ.ಸುಧಾಕರ ರೈ ಅವರನ್ನು ಸನ್ಮಾನಿಸಲಾಯಿತು. 2018-19 ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ತರಗತಿಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡ ಗೃಹ ರಕ್ಷಕ ದಳ, ಯುವ ಬ್ರಿಗೇಡ್ ಮತ್ತು ಎಸ್.ಕೆ.ಎಸ್.ಎಸ್.ಎಫ್ ವಿಖಾಯ ತಂಡವನ್ನು ಗೌರವಿಸಲಾಯಿತು.
ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಭವಾನಿಶಂಕರ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ ವಂದಿಸಿದರು. ಅಚ್ಚುತ ಅಟ್ಲೂರು ಕಾರ್ಯಕ್ರಮ ನಿರೂಪಿಸಿದರು.